
ಮಂಗಳೂರು : ನ್ಯಾಯಾಂಗ ನಿಂದನೆ ಪ್ರಕರಣವೊಂದರಲ್ಲಿ ಮಂಗಳೂರಿನ ನ್ಯಾಯಾಲಯವು ಹನುಮಂತ್ ಕಾಮತ್‌ಗೆ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಮಂಗಳೂರಿನ ವಿ.ಟಿ. ರಸ್ತೆಯಲ್ಲಿರುವ ಶ್ರೀ ವಿಠೊಬರು ಕುಮಾಯಿ ದೇವರ ಭಂಡಾರದ ದಿನನಿತ್ಯದ ಆಡಳಿತಾತ್ಮಕ ವ್ಯವಹಾರದಲ್ಲಿ ಹಸ್ತಕ್ಷೇಪ ಮಾಡಬಾರದು ಹಾಗೂ ಟ್ರಸ್ಟಿ ಎಂದು ತನ್ನನ್ನು ತಾನು ಪ್ರತಿಪಾದಿಸಬಾರದು ಎಂದು ಹನುಮಂತ ಕಾಮತ್ ಅವರ ವಿರುದ್ಧ ತಾತ್ಕಾಲಿಕ ನಿರ್ಬಂಧಕಾಜ್ಞೆ ಕೋರಿ ದೇವರ ಭಂಡಾರದ ಟ್ರಸ್ಟಿ ಎಂ. ವರದಾಯ ಪ್ರಭು ಅವರು ಸಲ್ಲಿಸಿದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಾಲಯವು ಹನುಮಂತ ಕಾಮತ್ ವಿರುದ್ಧ ತಾತ್ಕಾಲಿಕ ನಿರ್ಬಂಧಕಾಜ್ಞೆಯ ಆದೇಶವನ್ನು ಹೊರಡಿಸಿತ್ತು.
ಆ ಆದೇಶದ ವಿರುದ್ಧ ಹನುಮಂತ ಕಾಮತ್ ಅವರು ಸಲ್ಲಿಸಿದ್ದ ಮೇಲ್ಮನವಿ ತಿರಸ್ಕೃತವಾಗಿತ್ತು. ಅನಂತರ ಉಚ್ಚ ನ್ಯಾಯಾಲಯದಲ್ಲಿ ಸಲ್ಲಿಸಿದ ರಿಟ್ ಅರ್ಜಿಯಲ್ಲಿ ಯಾವುದೇ ತಡೆಯಾಜ್ಞೆಯನ್ನು ಹೈಕೋರ್ಟ್ ನೀಡಿರಲಿಲ್ಲ. ಆದರೆ ಹನುಮಂತ ಕಾಮತ್ ಅವರು ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ತಾನೇ ಭಂಡಾರದ ಟ್ರಸ್ಟಿ ಎಂದು ಘೋಷಣೆ ಮಾಡಿಕೊಂಡು ದಿನನಿತ್ಯದ ವ್ಯವಹಾರದಲ್ಲಿ ಭಾಗವಹಿಸುತ್ತಿದ್ದರು. ಹನುಮಂತ ಕಾಮತ್ ಅವರು ನ್ಯಾಯಾಲಯದ ಆದೇಶವನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸುತ್ತಿದ್ದಾರೆ ಎಂದು ಆರೋಪಿಸಲಾಗಿತ್ತು.
ವಿಚಾರಣೆ ನಡೆಸಿದ ನ್ಯಾಯಾಧೀಶರು ಹನುಮಂತ ಕಾಮತ್ ಅವರು ಉದ್ದೇಶಪೂರ್ವಕವಾಗಿ ತಾತ್ಕಾಲಿಕ ನಿರ್ಬಂಧಕಾಜ್ಞೆ ಆದೇಶವನ್ನು ಉಲ್ಲಂಘನೆ ಮಾಡಿರುವುದು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಲಯ 90 ದಿನಗಳ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. ಅರ್ಜಿದಾರರ ಪರ ಹಿರಿಯ ನ್ಯಾಯವಾದಿ ಪಿ. ರಂಜನ್ ರಾವ್ ವಾದಿಸಿದ್ದರು.
Leave a Reply