
ವರದಿ : ಅಶ್ವಿನಿ ಅಂಗಡಿ
ಬಾಗಲಕೋಟೆ, ಮೇ.31 (ಕರ್ನಾಟಕ ವಾರ್ತೆ) : ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಜಾಗೃತಿ ಜಾಥಾಕ್ಕೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಚಂದ್ರಶೇಖರ ದಿಡ್ಡಿ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ನವನಗರ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಶನಿವಾರ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಸಹಯೋಗದಲ್ಲಿ ಹಮ್ಮಿಕೊಂಡ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮದ ಬಗ್ಗೆ ಪ್ರತಿಯೊಬ್ಬರಲ್ಲೂ ಅರಿವು ಮೂಡಿಸಬೇಕು ಎಂದರು.
ಮದ್ಯ ವಯಸ್ಕರಿಗೆ ಸೀಮಿತವಾಗಿದ್ದ ತಂಬಾಕು ಸೇವನೆಯಿಂದ ಪ್ರಸ್ತುತ ದಿನಗಳಲ್ಲಿ 13-14 ವರ್ಷದ ಮಕ್ಕಳು ಕೂಡ ಈ ಚಟಕ್ಕೆ ಒಳಗಾಗುತ್ತಿರುವುದು ಆಘಾತಕಾರಿ ವಿಷಯವಾಗಿದೆ.ಮಕ್ಕಳು ಬೇಗನೆ ದುಶ್ಚಟಗಳಿಗೆ ಒಳಗಾಗುತ್ತಿದ್ದಾರೆ. ಶಾಲೆ ಕಾಲೇಜಿನ ಮಕ್ಕಳಿಗೂ ಇದರ ಬಗ್ಗೆ ಅರಿವು ಮೂಡಿಸುವುದು ಉತ್ತಮ. ತಂಬಾಕು ಸೇವನೆ ಹಾಗೂ ಮದ್ಯಪಾನ ಇನ್ನಿತರ ದುಶ್ಚಟದಿಂದ ಆರೋಗ್ಯದ ಮೇಲೆ ಉಂಟಾಗುವ ಗಂಭೀರ ಪರಿಣಾಮದ ಬಗ್ಗೆ ಅರಿವು ಮೂಡಿಸಬೇಕು.
ಸಾರ್ವಜನಕರು ದುಶ್ಚಟಗಳಿಂದ ಹೊರಬಂದು ಕುಟುಂಬದ ಪೋಷಣೆ ಕಡೆ ಗಮನಹರಿಸಿ, ಉತ್ತಮ ಜೀವನ ನಡೆಸುವಂತೆ ಮಾಡುವುದೇ ಈ ಕಾರ್ಯಕ್ರಮದ ಧ್ಯೇಯವಾಗಿದೆ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಮಂಜುನಾಥ ಮಾತನಾಡಿ, ತಂಬಾಕಿನಲ್ಲಿರುವ ನಿಕೋಟಿನ್ ಅಂಶವು ಮತ್ತೆ ಮತ್ತೆ ತಂಬಾಕು ಬಳಸಲು ಜನರನ್ನು ಪ್ರೇರೆಪಿಸಲಿದೆ. ಪುರುಷರಲ್ಲಿ ತಂಬಾಕು ಸೇವನೆ ಸಾಮಾನ್ಯ. ಆದರೆ ಇತ್ತೀಚಿನ ದಿನಗಳಲ್ಲಿ ಹೆಣ್ಣುಮಕ್ಕಳು ಸಹ ತಂಬಾಕು ಸೇವನೆಯಂತಹ ದುಶ್ಚಟಗಳಿಗೆ ಬಲಿಯಾಗುತ್ತಿರುವುದು ವಿಪರ್ಯಾಸ ಸಂಗತಿಯಾಗಿದೆ. ತಂಬಾಕು ಸೇವನೆಯ ದುಶ್ಚಟಗಳಿಂದಾಗುವ ನಿರಂತರ ಆರೋಗ್ಯದ ಸಮಸ್ಯೆಗಳ ಬಗ್ಗೆ ನಾಗರಿಕರಲ್ಲಿ ಅರಿವು ಮೂಡಿಸಿ ತಂಬಾಕು ಸೇವನೆಯನ್ನು ತಡೆಯುವುದೇ ಜಾಥಾದ ಉದ್ದೇಶ ಎಂದರು.
ಜಾಥಾ ಜಿಲ್ಲಾ ಆಸ್ಪತ್ರೆ ಆವರಣದಿಂದ ನಾನಾ ಕಡೆಗಳಲ್ಲಿ ಸಂಚರಿಸಿ ಎಲ್.ಐ.ಸಿ ವೃತ್ತಕ್ಕೆ ಮುಕ್ತಾಯಗೊಂಡಿತು. ಜಾಥಾದಲ್ಲಿ ವಿವಿಧ ಕಾಲೇಜಿನ ವಿದ್ಯಾರ್ಥಿ, ವಿದ್ಯಾರ್ಥಿನೀಯರು ಘೋಷಣಾ ಫಲಕಗಳನ್ನು ಹಿಡಿದುಕೊಂಡು ಘೋಷ ವ್ಯಾಕ್ಯಗಳನ್ನು ಕೂಗಿದರು. ಜಿಲ್ಲಾ ಶಸ್ತçಚಿಕಿತ್ಸಕರಾದ ಡಾ.ಮಹೇಶ ಕೋಣಿ, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ದಯಾನಂದ ಕರೆನ್ನವರ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಸುವರ್ಣ ಕುಲಕರ್ಣಿ, ಕುಟುಂಬ ಕಲ್ಯಾಣ ಅಧಿಕಾರಿಗಳು ಡಿ.ಬಿ.ಪಟ್ಟಣಶೆಟ್ಟ, ಡಾ.ಕುಸುಮಾ ಮಾಗಿ, ಜಿಲ್ಲಾ ತಂಬಾಕು ಸಲಹೆಗಾರ ಶಶಿಕುಮಾರ ಕುಮಟಳ್ಳಿ ಸೇರಿದಂತೆ ಜಿಲ್ಲಾ ಸಮೀಕ್ಷಣಾಧಿಕಾರಿಗಳ ಕಾರ್ಯಾಲಯದ ಸಿಬ್ಬಂದಿ, ವಿದ್ಯಾರ್ಥಿಗಳು ಜಾಥಾದಲ್ಲಿ ಪಾಲ್ಗೊಂಡಿದ್ದರು.
.
Leave a Reply